ಕೊಪ್ಪಳ : ಕಲ್ಯಾಣ ಕರ್ನಾಟಕ ಭಾಗದ ಹಿರಿಯ ಕಾಂಗ್ರೆಸ್ ನಾಯಕರು ಹಾಗೂ ಜೇವರ್ಗಿ ಕ್ಷೇತ್ರದ ಶಾಸಕರಾಗಿರುವ ಡಾ. ಅಜಯಸಿಂಗ್ ಅವರಿಗೆ ಮುಖ್ಯಮಂತ್ರಿ ಡಿಕೆಶಿ ಯವರ ನೂತನ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಕೊಪ್ಪಳ ಜಿಲ್ಲಾ ರಾಜಪೂತ ಕ್ಷತ್ರಿಯ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಅಮರ್ ಸಿಂಗ್ ರಜಪೂತ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಹಾಗೂ ಮುಖ್ಯಮಂತ್ರಿಗಳನ್ನು ಆಗ್ರಹಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು ಮಾಜಿ ಮುಖ್ಯಮಂತ್ರಿ ಎನ್. ಧರ್ಮಸಿಂಗ್ ಅವರ ಪುತ್ರರಾದ ಡಾ. ಅಜಯಸಿಂಗ್ ಅವರು ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಜನಪರ ಆಡಳಿತ ಮತ್ತು ಅಭಿವೃದ್ಧಿ ಕಾರ್ಯಗಳ ಮೂಲಕ ಜನರ ವಿಶ್ವಾಸ ಗಳಿಸಿದ್ದಾರೆ,
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷರಾಗಿ ಅವರು ಸಮರ್ಥವಾಗಿ ಕಾರ್ಯನಿರ್ವಹಿಸಿದ್ದು, ಅಕ್ಷರ ಆವಿಷ್ಕಾರ ಹಾಗೂ ಆರೋಗ್ಯ ಆವಿಷ್ಕಾರ ಸೇರಿದಂತೆ ಹಲವು ಜನೋಪಯೋಗಿ ಯೋಜನೆಗಳನ್ನು ಜಾರಿಗೊಳಿಸಿ ಜನಹಿತದ ಕೆಲಸ ಮಾಡಿದ್ದಾರೆ. ಅಲ್ಲದೆ, 2020ರಿಂದ 2022ರವರೆಗೆ ವಿಧಾನಸಭೆಯ ವಿರೋಧ ಪಕ್ಷದ ಉಪನಾಯಕರಾಗಿ ಸೇವೆ ಸಲ್ಲಿಸಿದ್ದು ಆಡಳಿತಾತ್ಮಕ ಸಾಕಷ್ಟು ಅನುಭವ ಹೊಂದಿದ್ದಾರೆ, ಕಲ್ಯಾಣ ಕರ್ನಾಟಕ ಭಾಗಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ 371(ಜೆ) ವಿಧಾನದ ಅನುಷ್ಠಾನದಲ್ಲಿ ಮಾಜಿ ಮುಖ್ಯಮಂತ್ರಿ ಎನ್. ಧರ್ಮಸಿಂಗ್ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರು ಮಹತ್ವದ ಪಾತ್ರ ವಹಿಸಿದ್ದರು. ಇದೀಗ ಎಐಸಿಸಿ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರು ವಿಶೇಷ ಮುತುವರ್ಜಿವಹಿಸಿ ಡಾ. ಅಜಯಸಿಂಗ್ ಅವರಿಗೆ ಸಚಿವ ಸ್ಥಾನ ದೊರಕುವಂತೆ ಕ್ರಮ ಕೈಗೊಳ್ಳಬೇಕು ಎಂದು ಕೊಪ್ಪಳ ಜಿಲ್ಲಾ ರಜಪೂತ್ ಕ್ಷತ್ರಿಯ ಕ್ಷೇಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷರಾದ ಭವಾನಿಸಿಂಗ್ ಮುದುಗಲ್ ಕರ್, ಮಹಿಳಾ ಮಂಡಲದ ಅಧ್ಯಕ್ಷರಾದ ಕಾವೇರಿ ಬಾಯಿ, ಮುಖಂಡರಾದ ಭೀಮಸಿಂಗ್ ಸೇರಿದಂತೆ ಮತ್ತಿತರು ಆಗ್ರಹಿಸಿದ್ದಾರೆ.
