ಕೊಪ್ಪಳ : ಸರ್ಕಾರಿ ನೌಕರರು ಹಾಗೂ ಶಿಕ್ಷಕರ ಕಣ್ಮಣಿಯಾಗಿರುವ ಶಂಭುಲಿಂಗನಗೌಡ ಪಾಟೀಲ ಹಲಗೇರಿ ಅವರು 38 ವರ್ಷಗಳ ಕಾಲ ಶಿಕ್ಷಣ ಕ್ಷೇತ್ರದಲ್ಲಿ ಸಾರ್ಥಕ ಹಾಗೂ ಸಮರ್ಪಿತ ಸೇವೆ ಸಲ್ಲಿಸಿ, ಶಿಕ್ಷಕ ವೃತ್ತಿಯಿಂದ ಗೌರವಯುತವಾಗಿ ಸೇವಾ ನಿವೃತ್ತಿ ಹೊಂದಿದ ಹಿನ್ನೆಲೆ, ಇಂದು ಕೊಪ್ಪಳದ ಗವಿಮಠಕ್ಕೆ ಭೇಟಿ ನೀಡಿ ಪರಮಪೂಜ್ಯ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿಗಳ ಆಶೀರ್ವಾದ ಪಡೆದರು.
ಶಂಭುಲಿಂಗನಗೌಡ ಪಾಟೀಲ ಅವರು ಹಲಗೇರಿಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಹಿರಿಯ ಮುಖ್ಯೋಪಾಧ್ಯಾಯರಾಗಿದ್ದು, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ , ಬೆಂಗಳೂರು ಇದರ ನಿಕಟಪೂರ್ವ ರಾಜ್ಯಾಧ್ಯಕ್ಷರಾಗಿ ಹಾಗೂ ಮಾಜಿ ರಾಜ್ಯ ಹಿರಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಜೊತೆಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು ಇದರ ಕೊಪ್ಪಳ ಜಿಲ್ಲಾ ಅಧ್ಯಕ್ಷರಾಗಿಯೂ ತಮ್ಮ ವಿಶಿಷ್ಟ ಕೊಡುಗೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಶ್ರೀಗಳ ದಿವ್ಯ ಆಶೀರ್ವಾದ ಮತ್ತು ಮಾರ್ಗದರ್ಶನವನ್ನು ಪಡೆದ ಅವರು, ಸಮಾಜ ಹಾಗೂ ಶಿಕ್ಷಣ ಕ್ಷೇತ್ರದ ಸೇವೆಯಲ್ಲಿ ಮುಂದೆಯೂ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಸಂಕಲ್ಪ ವ್ಯಕ್ತಪಡಿಸಿದರು.
“ಶ್ರೀಗಳ ಆಶೀರ್ವಾದ ಮತ್ತು ಮಾರ್ಗದರ್ಶನ ಸದಾ ನಮ್ಮೊಂದಿಗಿರಲಿ” ಎಂಬ ಪ್ರಾರ್ಥನೆಯೊಂದಿಗೆ ಭೇಟಿ ಸಾರ್ಥಕಗೊಂಡಿತು.
